ಕಡೇ ನಾಲ್ಕು ಸಾಲು
ಕವಿತೆಗಳು
ಉಮಾ ಮುಕುಂದ
ಉಮಾ ಮುಕುಂದ ಅವರ ಕವಿತೆಗಳು ಫೇಸ್ ಬುಕ್ ನಲ್ಲಿ ತುಂಬು ಸಂಕೋಚದಿಂದ ಇಣುಕಲು ಆರಂಭಿಸಿದಾಗ ನಾನು `ಅವಧಿ’ಗಾಗಿ ಅವರ ಒಂದಷ್ಟು ಕವಿತೆಗಳನ್ನು ಓದುವ ಅವಕಾಶ ದೊರೆಯಿತು. ಅಷ್ಟೇ..! ನಂತರ ಅವರ ಕವಿತೆಗಳ ಗುಂಗಿನಲ್ಲಿ ಸಿಕ್ಕಿಕೊಂಡೆ. ಯಾಕೆಂದರೆ, ಅವರು `ಥೇಟ್ ನನ್ನಂತೆಯೇ…’ ಅವರ ಕವಿತೆಗಳು ಸಹಜವಾಗಿ, ಸರಾಗವಾಗಿ ಎಲ್ಲರ ಮಧ್ಯೆ ಓಡಾಡುತ್ತದೆ. ಸೊಪ್ಪು ಕೊಳ್ಳುತ್ತದೆ, ಕೆಪುಚಿನೊಗೆ ಆರ್ಡರ್ ಮಾಡುತ್ತದೆ, ಸಾರನ್ನವೇ ಮುಗಿದಿಲ್ಲದಿರುವಾಗ ವಡೆ-ಪಾಯಸ ಬರುತ್ತಿರುವುದನ್ನು ಗೊತ್ತು ಮಾಡಿಕೊಳ್ಳುತ್ತದೆ. ಹತ್ತು ರೂಪಾಯಿಗೆ ಮೂರು ನಿಂಬೆಹಣ್ಣು ಕೊಳ್ಳಲು ಇಡೀ ಬುಟ್ಟಿಯನ್ನೇ ತಲೆಕೆಳಗು ಮಾಡುತ್ತದೆ, ಅಬ್ಬರದ ನಗುವಿನ ಮಧ್ಯೆ ಬಿಕ್ಕುಗಳನ್ನು ಹುಡುಕುತ್ತದೆ, ಸುಬ್ಬಮ್ಮನ ಅಂಗಡಿಯ ಸಾರಿನ ಪುಡಿ, ಡಿಮಾನಿಟೈಸೇಷನ್ ನಂತರದ ಜಿ ಎಸ್ ಟಿ… ಹೀಗೆ ಉಮಾ ಮುಕುಂದ ಅವರ ಕವಿತೆ ಕಿರೀಟ ಸಿಕ್ಕಿಸಿಕೊಂಡು ಅಂಬಾರಿಯಲ್ಲೇ ಪಯಣ ಮಾಡುವ ಅನಿವಾರ್ಯತೆ ಸೃಷ್ಟಿಸಿಕೊಳ್ಳದೆ… ಹವಾಯಿ ಚಪ್ಪಲಿಯನ್ನೇ ಮೆಟ್ಟಿ, ಬೇಕೆಂದ ಕಡೆ ಬಿಂದಾಸಾಗಿ ಸಂಚಾರ ಹೊರಟುಬಿಡುತ್ತದೆ.