ಕುವೆಂಪು ಅವರು ತಮ್ಮ ತಾಯಿಯ ತವರೂರಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್ ೨೯, ೧೯೦೪ ರಲ್ಲಿ ಜನಿಸಿದರು. ತಂದೆ ವೆಂಕಟಪ್ಪ; ತಾಯಿ ಸೀತಮ್ಮ. ಅವರ ಬಾಲ್ಯ ತಮ್ಮ ತಂದೆಯ ಊರಾದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಕಳೆಯಿತು.ಮೈಸೂರು ಮಹಾರಾಜ ಕಾಲೇಜಿನಲ್ಲಿ ಅಧ್ಯಾಪಕ (1929) ಆಗಿ ಅನಂತರ ಕ್ರಮೇಣ ಉಪಪ್ರಾಧ್ಯಾಪಕ, ಪ್ರಿನ್ಸಿಪಾಲರಾಗಿ ೧೯೫೬ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿ (1965) ಆಗಿ ಕಾರ್ಯನಿರ್ವಹಿಸಿ 1960ರಲ್ಲಿ ನಿವೃತ್ತರಾಗಿದ್ದರು.
ಕುವೆಂಪು ಅವರು ಮೈಸೂರಿನ ಮಹಾರಾಜ ಕಾಲೇಜಿನ ಪ್ರಾಧ್ಯಾಪಕರೂ, ಪ್ರಾಂಶುಪಾಲರೂ ಆಗಿದ್ದರು. ನಂತರ ಉಪಕುಲಪತಿಗಳಾದರು[೪]. ತಮ್ಮ ಕಲ್ಪನೆಯ ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದರು. ವಿಶ್ವವಿದ್ಯಾನಿಲಯವನ್ನು ಅಧ್ಯಯನಾಂಗ, ಸಂಶೋಧನಾಂಗ ಹಾಗೂ ಪ್ರಸಾರಾಂಗ ಎಂಬುದಾಗಿ ವಿಭಾಗಿಸಿದರು. ಕಡಿಮೆ ಅವಧಿಯಲ್ಲಿ ಕನ್ನಡದಲ್ಲಿ ಪಠ್ಯಪುಸ್ತಕಗಳನ್ನು ಬರೆಸಿ ಕನ್ನಡ ಮಾಧ್ಯಮದ ತರಗತಿಗಳನ್ನು ಆರಂಭಿಸಿದರು.
ಕುವೆಂಪು ಬಾಲ್ಯದಿಂದಲೂ ಸಾಹಿತ್ಯ ರಚನೆಯಲ್ಲಿ ನಿರತರಾಗಿದ್ದರು. ಮೈಸೂರಿನಲ್ಲಿ ನಡೆದ 38ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತಾಧ್ಯಕ್ಷರಾದರು. ಧಾರವಾಡದಲ್ಲಿ ನಡೆದ 39ನೇ ಕನ್ನಡ ಸಾಹಿತ್ಯ ಸಮ್ಮೇಳನ (1957) ಅಧ್ಯಕ್ಷತೆ ವಹಿಸಿದ್ದರು. ಪದ್ಮವಿಭೂಷಣ ಪ್ರಶಸ್ತಿ, ಜ್ಞಾನಪೀಠ ಪ್ರಶಸ್ತಿ, ರಾಜ್ಯಸರ್ಕಾರದಿಂದ ರಾಷ್ಟ್ರಕವಿ ಪ್ರಶಸ್ತಿ, ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗಿತ್ತು.